ಮಳೆ, ಪ್ರವಾಹ ಭೀತಿ...ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ
ಮಳೆಗಾಲದಲ್ಲಿ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ಭೇಟಿಕೊಡಬೇಕು, ಮುಂಗಾರಿನಲ್ಲಿ ಮಿಂದೆದ್ದ ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಬೇಕು ಅಂದುಕೊಂಡಿದ್ದರೆ, ಸ್ವಲ್ಪ ಯೋಚಿಸಿ. ಯಾಕೆಂದರೆ ಅತಿಯಾದ ಮಳೆ ಹಾಗೂ ಪ್ರವಾಹದ ಭೀತಿಯಿಂದಾಗಿ ಇಲ್ಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ.. ಈ ಪ್ರಮಾಣವು ಹೆಚ್ಚಾಗುವ ಸಂಭವವಿದೆ. ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಲಾಗಿದೆ.

ಕೆ.ಆರ್.ಎಸ್. ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ಜನರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಬ ದೇವಸ್ಥಾನ ಪ್ರದೇಶಗಳಿಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ನದಿ ತೀರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.