ಬೆಂಗಳೂರು: ಭಾರತ ತಂಡದ ಲೆಜೆಂಡರಿ ಆಟಗಾರ, ಮಾಜಿ ಕೋಚ್ ಹಾಗೂ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ ಅವರಿಗೆ ಹೊಸ ಜವಾಬ್ದಾರಿಯನ್ನು ಕರ್ನಾಟಕ ಸರ್ಕಾರ ನೀಡಿದೆ.

ಕರ್ನಾಟಕ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ಭಾರತದ ತಂಡದ ಮಾಜಿ ಕ್ರಿಕೆಟಿಗ ಅನಿಲ್​ ಕುಂಬ್ಳೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

ಅಲ್ಲದೆ ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅನಿಲ್ ಕುಂಬ್ಳೆ ಅವರು, ಅರಣ್ಯ ಸಂರಕ್ಷಣೆ, ಅರಣ್ಯ ಅಭಿವೃದ್ಧಿ, ಮರಗಳ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಕ್ತ ವ್ಯಕ್ತಿ ಎಂಬುದಾಗಿ ತಿಳಿಸಿದ್ದಾರೆ. ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದ್ದು,ಅರಣ್ಯವನ್ನೂ ಅಷ್ಟೇ ಪ್ರೀತಿಸುತ್ತಾರೆ. ಹಾಗಾಗಿ ಯಾವುದೇ ಸಂಭಾವನೆ ಪಡೆಯದೆ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿಗೋಷ್ಟಿಯೊಂದರಲ್ಲಿ ಖಂಡ್ರೆ ಮಾಹಿತಿ ನೀಡಿದ್ದಾರೆ.

anil kumble

ರಾಜ್ಯದಲ್ಲಿ 8,848 ‘ವನ ಮಹೋತ್ಸವ’

ಅರಣ್ಯ ಸಚಿವರಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ತಮ್ಮ ಸಾಧನೆ ಮತ್ತು ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡ ಈಶ್ವರ್ ಬಿ ಖಂಡ್ರೆ, ಕಳೆದ ಎರಡು ವರ್ಷಗಳಲ್ಲಿ ಸುಮಾರು 8,848 ‘ವನಮಹೋತ್ಸವ’ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆ ಬದಿ, ಸರ್ಕಾರಿ ಜಮೀನಿನಲ್ಲಿ ಅಂದಾಜು 8.5 ಕೋಟಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಲಾಗಿದೆ ಎಂದು ತಿಳಿಸಿದರು.